
ಸಕಲೇಶಪುರ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ಜತೆಗೂ ಚರ್ಚಿಸಿ ಅನುದಾನ ಹಾಗೂ ಯೋಜನೆಗಳನ್ನು ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ತಾಲ್ಲೂಕಿನ ಹಾನುಬಾಳು ಹೋಬಳಿಯ ದೇವಾಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿದ ರಸ್ತೆಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕೆಲವರು ಅಭಿವೃದ್ಧಿಯಲ್ಲೂ ರಾಜಕೀಯ ಮಾಡುತ್ತಾರೆ. ಆದರೆ ನನಗೆ ಅದು ಬೇಕಿಲ್ಲ. ಕಷ್ಟದಲ್ಲಿರುವವರಿಗೆ ನೆರವು ನೀಡುವ ಮಾನವೀಯತೆ ನನಗಿದೆ. ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಈ ಭಾಗದಲ್ಲಿ ಹಲವಾರು ವರ್ಷಗಳಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲವಾಗುತ್ತಿತ್ತು. ನಾನೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆಯ ಸ್ಥಿತಿಯನ್ನು ಪರಿಶೀಲಿಸಿ ಅನುದಾನ ಮೀಸಲಿಟ್ಟಿದ್ದೇನೆ. ದೇವಾಲದಕೆರೆ–ದೇವರುಂದ ಅತ್ತಿಬಿಡು–ಬಾಣಿಬೈಲು ಹೊರಗಿನ ರಸ್ತೆಯನ್ನು ₹3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿದೆ. ಜೊತೆಗೆ ಹಿರೆಮಂದಿ ಹಾಗೂ ಕುಮ್ಮತ್ತಹಳ್ಳಿ ರಸ್ತೆಗಳನ್ನು ₹2.75 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆ ಮಾಡಲಾಗಿದೆ ಎಂದು ಹೇಳಿದರು.
ದೇವಾಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇನ್ನೂ ಕೆಲವು ಕಾಮಗಾರಿಗಳಿಗೆ ಶೀಘ್ರದಲ್ಲೇ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರು ಸುಗಮವಾಗಿ ಸಂಚರಿಸುವ ರಸ್ತೆ, ಕುಡಿಯುವ ನೀರು ಹಾಗೂ ವಿದ್ಯುತ್‌ನಂತಹ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು, ಗ್ರಾಮಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
