
ಸಕಲೇಶಪುರ: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಯಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕಾರ್ಯನಿರ್ವಹಿಸಲು ಪರವಾನಿಗೆ ನೀಡುವ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (ನೋಂ.659) ಸಕಲೇಶಪುರ ಸ್ಥಳೀಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ಸಕಲೇಶಪುರದ ಕೆಪಿಟಿಸಿಎಲ್ ವಿಭಾಗೀಯ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನೌಕರರು ಹಾಗೂ ಅಧಿಕಾರಿಗಳು ಭಾಗವಹಿಸಿ, ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳಿಗೆ ಅವಕಾಶ ಕಲ್ಪಿಸುವುದು ಸಾರ್ವಜನಿಕ ವಲಯದ ವಿದ್ಯುತ್ ಸಂಸ್ಥೆಗಳ ಅಸ್ತಿತ್ವಕ್ಕೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.ಟಾಟಾ ಪವರ್ ಕಂಪನಿಯು ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆ ಆರಂಭಿಸಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ವಿದ್ಯುತ್ ಕ್ಷೇತ್ರದ ಸಾರ್ವಜನಿಕ ಸ್ವರೂಪವನ್ನು ಉಳಿಸಿಕೊಳ್ಳಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಮುಖಂಡರು, ನಿಗಮದ ಅಸ್ತಿತ್ವ ಹಾಗೂ ನೌಕರರ ಭವಿಷ್ಯದ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಸಂಘ ಹೋರಾಟ ನಡೆಸುತ್ತಿದ್ದು, ಈ ಹೋರಾಟಕ್ಕೆ ಎಲ್ಲ ನೌಕರರು ಹಾಗೂ ಸಾರ್ವಜನಿಕರು, ರೈತರು ಬೆಂಬಲ ನೀಡಬೇಕೆಂದು ಕರೆ ನೀಡಿದರು.ಪ್ರತಿಭಟನೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಸ್ಥಳೀಯ ಸಮಿತಿಯ ಪದಾಧಿಕಾರಿಗಳು, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರು, ಬೇಲೂರು ಹಾಗೂ ಆಲೂರು ಪ್ರಾಥಮಿಕ ಸಮಿತಿಗಳ ಪದಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಸಂಘದ ಪ್ರತಿನಿಧಿಗಳು, ಇಂಜಿನಿಯರಿಂಗ್, ಡಿಪ್ಲೊಮಾ ಇಂಜಿನಿಯರಿಂಗ್ ಹಾಗೂ ಲೆಕ್ಕಾಧಿಕಾರಿಗಳ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
