
ಸಕಲೇಶಪುರ :ತಾಲ್ಲೂಕಿನ ಮಾಗಡಿ ಗ್ರಾಮದ ಸಚಿನ್ ಅವರ ತೋಟ ಮತ್ತು ಮಾಗಡಿ ಎಸ್ಟೇಟ್ ನಲ್ಲಿ 3 ಕಾಡನೆಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಕಾಡಾನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಿ, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಹಾಗೂ ರಾತ್ರಿ ಸಮಯ ಹಾಗೂ ಬೆಳಗಿನ ಜಾವದ ವೇಳೆ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕು ಹಾಗೂ ತೋಟಕ್ಕೆ ತೆರಳುವ ಮುನ್ನ ಅರಣ್ಯ ಇಲಾಖೆಯಿಂದ ಮಾಹಿತಿಯನ್ನು ಪಡೆದು ತೆರಳಬೇಕು ಎಂದು ಮನವಿ ಮಾಡಿದರು.ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಒಂಟಿಯಾಗಿ ಓಡಾಡುವುದನ್ನು ತಪ್ಪಿಸುವುದು, ಅನಿವಾರ್ಯವಿದ್ದಲ್ಲಿ ಎಚ್ಚರಿಕೆಯಿಂದ ಸಂಚರಿಸುವುದು ಹಾಗೂ ಯಾವುದೇ ರೀತಿಯ ಆತಂಕಕಾರಿ ಪರಿಸ್ಥಿತಿ ಕಂಡುಬಂದಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ತಿಳಿಸಿದರು.ಜನರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳದ ಮೇಲೆ ನಿಗಾ ವಹಿಸಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
