
ಸಕಲೇಶಪುರ :ಮಲೆನಾಡು ಭಾಗದಲ್ಲಿ ಶನಿವಾರ ಬೆಳಗ್ಗಿನಿಂದ ಗಾಳಿ ಸಹಿತ ತುಂತುರು ಮಳೆ ಸುರಿಯುತ್ತಿದ್ದು, ಹಲವು ಕಡೆ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ತಾಲೂಕಿನ ಸರಗಳ್ಳಿ ಗ್ರಾಮದ ಸಮೀಪ ಭಾರಿ ಗಾಳಿಯ ಹೊಡೆತಕ್ಕೆ ದೊಡ್ಡ ಮರಗಳು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಹುಚ್ಚಂಗಿ–ಕೆರೋಡಿ ರಸ್ತೆ ಸಂಪೂರ್ಣ ಬಂದ್ ಆಗಿದೆ. ಬೆಳಗ್ಗಿನಿಂದಲೇ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಆರಂಭಿಸಿದ್ದು, ರಸ್ತೆ ಸಂಚಾರವನ್ನು ಶೀಘ್ರದಲ್ಲೇ ಪುನಃ ಆರಂಭಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
