

ಸಕಲೇಶಪುರ: ಹಾನುಬಾಳುದಿಂದ ದೇವಾಲದಕೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಗೇಟ್ ಲೈನ್ ಸಮೀಪ ಹಲವು ವಿದ್ಯುತ್ ಕಂಬಗಳು ಅಪಾಯಕಾರಿ ರೀತಿಯಲ್ಲಿ ರಸ್ತೆಯತ್ತ ವಾಲಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಭೀತಿ ಎದುರಾಗಿದೆ. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಕಂಬಗಳ ಅಡಿಭಾಗ ದುರ್ಬಲಗೊಂಡಿದ್ದು, ಕೆಲವು ಕಂಬಗಳು ರಸ್ತೆಯತ್ತ ವಾಲಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಹಾಗೂ ಗ್ರಾಮಸ್ಥರು ಸಂಚರಿಸುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದ್ದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯದಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವುದು ಅಥವಾ ಸುರಕ್ಷಿತವಾಗಿ ಮರುಸ್ಥಾಪಿಸುವ ಮೂಲಕ ಅನಾಹುತವನ್ನು ತಪ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮಳೆಗಾಲದ ಸಂದರ್ಭದಲ್ಲಿ ಜನರ ಜೀವ ಹಾಗೂ ಆಸ್ತಿಪಾಸ್ತಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹಿಸಿದ್ದಾರೆ.
