
ಹತ್ತು ದಿನಗಳಿಂದ ವಿದ್ಯುತ್ ಇಲ್ಲ: ಕುಡಿಯುವ ನೀರಿಗೂ ಸಂಕಷ್ಟ – ಕರವೇ ಪ್ರತಿಭಟನೆ ಎಚ್ಚರಿಕೆ
ಸಕಲೇಶಪುರ, ಜು. 9: ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಣಾಲು, ಕುಂಟಳ್ಳಿ, ನೆಲಗಳ್ಳಿ, ಕುಮಾರಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಸುಮಾರು ಹತ್ತು ದಿನಗಳಿಂದ ವಿದ್ಯುತ್ ಸರಬರಾಜು ಸ್ಥಗಿತಗೊಂಡಿರುವುದರಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.ವಿದ್ಯುತ್ ಇಲ್ಲದ ಕಾರಣ ಮನೆಮನೆಗಳಲ್ಲಿ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ವಿಶೇಷವಾಗಿ ಕುಡಿಯುವ ನೀರಿನ ಪೂರೈಕೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಗ್ರಾಮಸ್ಥರು ಹಲವು ದಿನಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ *ಸಂಗ್ರಾಮ್* ಹೊಡಚಳ್ಳಿ ಹಾಗೂ ಹೋಬಳಿ ಉಪಾಧ್ಯಕ್ಷ ದೇವಲಕೆರೆ *ಸುನಿಲ್* ಮಾತನಾಡಿ, “ಕಳೆದ ಹತ್ತು ದಿನಗಳಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯುತ್ ಮತ್ತು ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಕೂಡ ಒದಗಿಸಲು ಅಧಿಕಾರಿಗಳು ವಿಫಲರಾಗಿರುವುದು ಖಂಡನೀಯ. ಕೂಡಲೇ ವಿದ್ಯುತ್ ಸಂಪರ್ಕವನ್ನು ಪುನಃಸ್ಥಾಪಿಸಿ, ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು” ಎಂದು ಆಗ್ರಹಿಸಿದರು.ಇನ್ನೂ ಅಧಿಕಾರಿಗಳು ಇದೇ ರೀತಿಯ ನಿರ್ಲಕ್ಷ್ಯ ಮುಂದುವರಿಸಿದರೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಗಗನ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.ಗ್ರಾಮಸ್ಥರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
