ಬೆಟ್ಟದ ಭೈರವೇಶ್ವರ ದೇವಸ್ಥಾನಕ್ಕೆ ಪ್ರವಾಸಿಗರ ಪ್ರವೇಶ ಸಂಪೂರ್ಣ ನಿಷೇಧಕ್ಕೆ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಆಗ್ರಹ

ಸಕಲೇಶಪುರ: ತಾಲ್ಲೂಕಿನ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಸ್ಥಾನದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ದೇವಾಲಯಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ.ಈ ಸಂಬಂಧ ಸಕಲೇಶಪುರ ತಹಸೀಲ್ದಾರರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಅಧ್ಯಕ್ಷ ಮಂಜುನಾಥ ಕಬ್ಬಿನಗದ್ದೆ, ಪಾಂಡವರ ಕಾಲದ ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಸ್ಥಾನವು ಸಾವಿರಾರು ಕುಟುಂಬಗಳ ಮನೆದೇವರಾಗಿದ್ದು, ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಕೆಲವು ಪ್ರವಾಸಿಗರು ಚಪ್ಪಲಿ ಧರಿಸಿಕೊಂಡೇ ದೇವಾಲಯದ ಆವರಣ ಪ್ರವೇಶಿಸುವುದು, ಮೋಜು–ಮಸ್ತಿ ನಡೆಸುವುದು, ಜೋರಾಗಿ ಸಂಗೀತ ಹಾಕಿ ನೃತ್ಯ ಮಾಡುವುದು ಸೇರಿದಂತೆ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವ ರೀತಿಯ ವರ್ತನೆ ನಡೆಸುತ್ತಿದ್ದಾರೆ. ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವಾಗುತ್ತಿದ್ದು, ದೇವಾಲಯದ ಗೌರವಕ್ಕೂ ಧಕ್ಕೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.ದೇವಾಲಯದಲ್ಲಿ ಪ್ರತಿದಿನ ಪೂಜೆ, ಪುನಸ್ಕಾರ, ಹೋಮ–ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಪೂಜೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅನಾಚಾರ ನಡೆಸುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ ದೇವಸ್ಥಾನದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಅಗತ್ಯ ಆದೇಶ ಹೊರಡಿಸಬೇಕು ಎಂದು ತಹಸೀಲ್ದಾರರಲ್ಲಿ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!