
ಸಕಲೇಶಪುರದಲ್ಲಿ ವಯೋಮಿತ್ರ ಉಚಿತ ಆರೋಗ್ಯ ಶಿಬಿರಕ್ಕೆ ಉತ್ತಮ ಸ್ಪಂದನೆಸಕಲೇಶಪುರ, ಜು. 23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಹಾಸನ ಇವರ ವತಿಯಿಂದ 2026–27ನೇ ಸಾಲಿನ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಎಂ.ಎಸ್.ಡಿ. ವಯೋಮಿತ್ರ ಕಾರ್ಯಕ್ರಮದ ಅಂಗವಾಗಿ ಗುರುವಾರ ಸಕಲೇಶಪುರದ ಸರ್ಕಾರಿ ತಾಲ್ಲೂಕು ಹೋಮಿಯೋಪತಿ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು.ಶಿಬಿರದಲ್ಲಿ ಸಂಧಿವಾತ, ಕೀಲು ನೋವು, ಕೀಲುಗಳ ಊತ, ಸೊಂಟದ ನೋವು ಸೇರಿದಂತೆ ವಯೋಸಹಜ ಸಮಸ್ಯೆಗಳು, ಮಧುಮೇಹ, ರಕ್ತದೊತ್ತಡ, ಮಲಬದ್ಧತೆ ಹಾಗೂ ನಿದ್ರಾಹೀನತೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ಹಾಗೂ ಔಷಧಿಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ವೈದ್ಯಾಧಿಕಾರಿ ಡಾ. ಅರುಣ್ ಕುಮಾರ್, ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.ಡಾ. ಕೃಷ್ಣ ಪ್ರಸಾದ್ ಮಾತನಾಡಿ, ರಾಷ್ಟ್ರೀಯ ಆಯುಷ್ ಅಭಿಯಾನದಡಿ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಪ್ರತಿ ತಿಂಗಳ ಮೂರನೇ ಗುರುವಾರ ವಯೋಮಿತ್ರ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ವಿಶ್ವನಾಥ್ ಮಾತನಾಡಿ, ಸಮಾಜದ ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಇಂತಹ ಶಿಬಿರಗಳು ಅತ್ಯಂತ ಸಹಕಾರಿಯಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪತ್ರಕರ್ತ ದಯಾನಂದ, ಡಾ. ಹಾಜೀರ ನಾಜರೀನ್, ಡಾ. ಪ್ರೇಮ ರಾಥೋಡ್, ಡಾ. ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
