ಒಂಟಿ ಕಾಡಾನೆ ಏಕಾಏಕಿ ದಾಳಿ: ರೈತನ ಕಾಲುಮುರಿತ

ಸಕಲೇಶಪುರ: ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರಂಗಿ ಸಮೀಪದ ಶಾಂತಪುರ ಗ್ರಾಮದ 54 ವರ್ಷದ ಮಲ್ಲೇಶ್ ಅವರ ಮೇಲೆ ಸೋಮವಾರ ಸಂಜೆ ಒಂಟಿ ಕಾಡಾನೆ ದಾಳಿ ನಡೆಸಿದ್ದು, ಅವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಲ್ಲೇಶ್ ಅವರು ಸಂಜೆ ತಮ್ಮ ಗದ್ದೆಯಿಂದ ದನಗಳನ್ನು ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಏಕಾಏಕಿ ಎದುರಾದ ಒಂಟಿ ಕಾಡಾನೆ ದಾಳಿ ನಡೆಸಿದೆ. ಈ ವೇಳೆ ಕಾಡಾನೆ ಅವರನ್ನು ಬಲಗಾಲಿಗೆ ತುಳಿದ ಪರಿಣಾಮ ಗಂಭೀರ ಗಾಯಗಳಾಗಿದ್ದು, ಹಾಗೂ ಬಲಗಾಲು ಮೂಳೆ ಮುರಿದಿದ್ದು ಸ್ಥಳೀಯರ ಸಹಾಯದಿಂದ ತಕ್ಷಣ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಆರ್‌ಎಫ್‌ಒ ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುವಿನ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಒಂಟಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸಿ ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!